ಬೆಂಗಳೂರು, ಫೆ. 16 (DaijiworldNews/TA): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ನಡೆಸಿದ ಮತ್ತೊಂದು ಪ್ರಯತ್ನವೂ ವಿಫಲವಾಗಿದೆ. ಮಗಳಿಗೆ ಪರೀಕ್ಷೆಗಳು ಸಮೀಪಿಸಿರುವ ಹಿನ್ನೆಲೆಯಲ್ಲಿ 25 ದಿನಗಳ ಮಧ್ಯಂತರ ಜಾಮೀನು ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಮನವಿ ಮಾಡಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.

ಪವಿತ್ರಾ ಗೌಡ ಅವರು ನಟ ದರ್ಶನ್ ಅವರ ಆಪ್ತರಾಗಿದ್ದರು. ಇಬ್ಬರೂ ಲಿವ್-ಇನ್ ಸಂಬಂಧದಲ್ಲಿ ಇದ್ದರೆಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾಗೆ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರ ದರ್ಶನ್ ಗಮನಕ್ಕೆ ಬಂದ ನಂತರ, ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಪಟ್ಟಣಗೆರೆ ಶೆಡ್ನಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಪವಿತ್ರಾ ಹಾಗೂ ದರ್ಶನ್ ಸ್ಥಳದಲ್ಲೇ ಇದ್ದು ಹಲ್ಲೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪವೂ ಇದೆ.
ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಪವಿತ್ರಾಗೆ ಮಗಳು ಮಾತ್ರ ಇರುವುದರಿಂದ, ಆಕೆಯ ಪರೀಕ್ಷೆ ಹಿನ್ನೆಲೆಯಲ್ಲಿ 25 ದಿನಗಳ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಆದರೆ 57ನೇ ಸಿಸಿಹೆಚ್ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ಪವಿತ್ರಾಗೆ ಜೈಲುವಾಸ ಮುಂದುವರಿಸುವ ಅನಿವಾರ್ಯತೆ ಎದುರಾಗಿದೆ.
ಇದಕ್ಕೂ ಮೊದಲು ಜೈಲು ಊಟದಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಿ ಮನೆ ಊಟಕ್ಕೆ ಅನುಮತಿ ನೀಡಬೇಕೆಂದು ಪವಿತ್ರಾ ಗೌಡ ಮನವಿ ಮಾಡಿದ್ದರು. ಕೆಲವು ದಿನಗಳ ಕಾಲ ಇದಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಬಳಿಕ ಆ ಸೌಲಭ್ಯವನ್ನು ರದ್ದುಪಡಿಸಲಾಯಿತು. ಪ್ರಕರಣದ ವಿಚಾರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನ್ಯಾಯಾಲಯದ ತೀರ್ಪು ಹೇಗಿರಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.