ಕೀವ್,ನ. 14 (DaijiworldNews/AK): ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯ ನಡೆಸಿದ ಬೃಹತ್ ದಾಳಿಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್ ರಾಜಧಾನಿಯ 10 ಜಿಲ್ಲೆಗಳನ್ನು ಗುರಿಯಾಗಿಸಿ ರಷ್ಯವು ಸುಮಾರು 430 ಡ್ರೋನ್ ಗಳು ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿ ಸಹಿತ 18 ಕ್ಷಿಪಣಿಗಳನ್ನು ಬಳಸಿ ದಾಳಿ ನಡೆಸಿದ್ದು ಹಲವಾರು ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ.
ಜನತೆ ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಉದ್ದೇಶಪೂರ್ವಕವಾಗಿ ಗುರಿಪಡಿಸಲಾಗಿದೆ. ದಾಳಿಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿದ್ಯುತ್ ಮತ್ತು ನೀರು ಪೂರೈಕೆ ವ್ಯವಸ್ಥೆಗೆ ಹಾನಿಯಾಗಿದ್ದು ಖಾರ್ಕಿವ್ ಮತ್ತು ಒಡೆಸಾ ಪ್ರಾಂತದ ಮೇಲೆಯೂ ದಾಳಿ ನಡೆಸಲಾಗಿದೆ ಎಂದವರು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮಧ್ಯೆ, ಗುರುವಾರ ರಾತ್ರಿಯಿಂದ ಉಕ್ರೇನ್ನ 216 ಡ್ರೋ ಹೊಡೆದುರುಳಿಸಲಾಗಿದೆ ಎಂದು ರಷ್ಯದ ರಕ್ಷಣಾ ಇಲಾಖೆ ಶುಕ್ರವಾರ ಹೇಳಿದೆ.