ಹಾಂಗ್ ಕಾಂಗ್, ನ. 27 (DaijiworldNews/TA): ಹಾಂಗ್ ಕಾಂಗ್ನ ತೈ ಪೊ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡಕ್ಕೆ ನಿನ್ನೆ ಮಧ್ಯಾಹ್ನ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ಅಗ್ನಿ ಜ್ವಾಲೆ ವ್ಯಾಪಕವಾಗಿ ಹರಡಿದ್ದು, ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಗ್ನಿಶಾಮಕ ಸೇವಾ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಬೆಂಕಿ ಆರಿಸುವ ಕಾರ್ಯಾಚರಣೆ ವೇಳೆ ಭಾಗವಹಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬೆಂಕಿ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದ್ದರಿಂದ ಸುತ್ತಮುತ್ತಲು ಇರುವ ಸುಮಾರು 700 ನಿವಾಸಿಗಳನ್ನು ತಕ್ಷಣ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಅಪಘಾತದ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.