ಕೊಲಂಬೊ, ನ. 29 (DaijiworldNews/AA): ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ಭಾರತ 'ಆಪರೇಷನ್ ಸಾಗರ ಬಂಧು' ಅಡಿಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದೆ. ಇದರ ಭಾಗವಾಗಿ ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡವರಿಗಾಗಿ ತುರ್ತು ಪರಿಹಾರ ಸಾಮಗ್ರಿಗಳನ್ನ ಭಾರತ ಕಳುಹಿಸಿದೆ.

ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿ, ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಲು, ಸಾವಿನ ಸಂಖ್ಯೆ ಹೆಚ್ಚಾಗುವದನ್ನು ತಪ್ಪಿಸಲು ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ.
ಅಗತ್ಯ ಆಹಾರ ವಸ್ತುಗಳು, ನೈರ್ಮಲ್ಯ ಸಾಮಗ್ರಿಗಳನ್ನ, ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ C130 ಮಧ್ಯರಾತ್ರಿ 1:30ರ ಸುಮಾರಿಗೆ ಕೊಲಂಬೊದ ಬಂಡರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ಬಳಿಕ ಅಲ್ಲಿನ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಶ್ರೀಲಂಕಾ ವಾಯುಪಡೆಯ ಅಧಿಕಾರಿಗಳು ಪರಿಹಾರ ಸಾಮಗ್ರಿಗಳನ್ನ ಸ್ವೀಕರಿಸಿದ್ದಾರೆ.
ಇದರ ಬೆನ್ನಲ್ಲೇ ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಉದಯಗಿರಿ ದ್ವೀಪ ರಾಷ್ಟ್ರಕ್ಕೆ ಮೊದಲ ಹಂತದ ಪರಿಹಾರ ಸಾಮಗ್ರಿಗಳನ್ನ ಹಸ್ತಾಂತರಿಸಿತು. ಶ್ರೀಲಂಕಾದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ನಾಪತ್ತೆಯಾದ 34 ಮಂದಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ಮಾಹಿತಿ ನೀಡಿದೆ.