ಟೊರೊಂಟೊ, ಜು. 12 (DaijiworldNews/TA): ಕೆನಡಾದ ಟೊರೊಂಟೊ ನಗರದಲ್ಲಿ ನಡೆಯುತ್ತಿದ್ದ ಜನಪ್ರಿಯ ಲ್ಯಾಟಿನ್ ಸಂಸ್ಕೃತಿಯ ಬೀದಿ ಉತ್ಸವ ‘ಸಾಲ್ಸಾ ಆನ್ ಸೇಂಟ್ ಕ್ಲೇರ್’ ವೇಳೆ ಭೀಕರ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ಸ್ಥಳೀಯ ಸಮಯ ಸುಮಾರು 8.12ರ ವೇಳೆಗೆ, ಸಾವಿರಾರು ಮಂದಿ ಉತ್ಸವದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಸಾರ್ವಜನಿಕರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಉತ್ಸವ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಪ್ರಾಣ ಉಳಿಸಿಕೊಳ್ಳಲು ಎಲ್ಲೆಂದರಲ್ಲಿ ಓಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಟೊರೊಂಟೊ ಪೊಲೀಸರು ಹಾಗೂ ತುರ್ತು ರಕ್ಷಣಾ ಸಿಬ್ಬಂದಿ ಆರು ಮಂದಿಯನ್ನು ರಕ್ತದ ಮಡುವಿನಲ್ಲಿ ಪತ್ತೆಹಚ್ಚಿದ್ದಾರೆ. ಅವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಬಹಿರಂಗಪಡಿಸಿಲ್ಲ.
ದಾಳಿ ನಡೆಸಿದ ಶೂಟರ್ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಸ್ಥಳದ ಸಮೀಪ ತೆರಳದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ದಾಳಿಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಟೊರೊಂಟೊ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಕೆನಡಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಡಿನ ದಾಳಿ ಹಾಗೂ ಗ್ಯಾಂಗ್ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಆತಂಕಕ್ಕೆ ಕಾರಣವಾಗಿದೆ. ಟೊರೊಂಟೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ನೆಲೆಸಿರುವುದರಿಂದ, ಈ ಘಟನೆ ಅಲ್ಲಿನ ಭಾರತೀಯ ಸಮುದಾಯದಲ್ಲೂ ಕಳವಳ ಮೂಡಿಸಿದೆ.