ಮಂಗಳೂರು, ಏ.30 (DaijiworldNews/AA): ನಗರದ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು ಆದರ್ಶ್ ಎಂಬ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಹತ್ಯೆಯಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ಖುದ್ದಾಗಿ ಗುರುತಿಸಲು ಮತ್ತು ಮುಂದಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.