ಬಂಟ್ವಾಳ, ಆ. 22 (DaijiworldNews/AA): ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಹಾಗೂ ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ನೇತೃತ್ವದ ನಿಯೋಗದಿಂದ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ತಾಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು ಹಾಗೂ ಬಿ.ಸಿ ರೋಡ್ ಸಿಟಿ ಕೌನ್ಸಿಲ್ ಅಧ್ಯಕ್ಷ ಬಶೀರ್ ಪಲ್ಲ ಉಪಸ್ಥಿತರಿದ್ದರು.