ಕಾರ್ಕಳ, ಅ. 11 (DaijiworldNews/AA): ಸ್ನೇಹಿತರಿಂದ ಬ್ಲಾಕ್ಮೇಲ್ಗೆ ಒಳಗಾದ ಬಗ್ಗೆ ಡೆತ್ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲಿಸಲಾಗುತ್ತಿದೆ.

ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಮೃತ ಯುವಕ. ಅವರು ಗುರುವಾರ ಬೆಳ್ಮಣ್ನಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಪ್ರೇಮ ವೈಫಲ್ಯದಿಂದ ಅಭಿಷೇಕ್ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅಭಿಷೇಕ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಆತನ ಕುಟುಂಬದವರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ನೋಟ್ನಲ್ಲಿ ಅಭಿಷೇಕ್, ತನ್ನ ನಾಲ್ವರು ಸ್ನೇಹಿತರು ತನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೊಬೈಲ್ ಫೋನ್ಗಳನ್ನು ಹೆಚ್ಚಿನ ತನಿಖೆಗಾಗಿ ವಶಪಡಿಸಿಕೊಳ್ಳಲಾಗಿದೆ. ಆದರೆ ಆ ಯುವತಿ ಯಾವುದೇ ವಿಡಿಯೋ ಹಂಚಿಕೊಂಡಿದ್ದು ಅಥವಾ ಬ್ಲಾಕ್ಮೇಲ್ನಲ್ಲಿ ಭಾಗಿಯಾಗಿದ್ದಾಳೆಯೇ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ತನಿಖೆಯ ಭಾಗವಾಗಿ ಆ ಯುವತಿಯ ಮೊಬೈಲ್ ಫೋನ್ ಅನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ದೃಢಪಡಿಸಿದ್ದಾರೆ.