ಬಂಟ್ವಾಳ, ಅ. 12 (DaijiworldNews/AA): ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಫರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 10 ಕೆಜಿ ಗಾಂಜಾವನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 8 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಐ ಸಂದೀಪ್ ಕುಮಾರ್ ಶೆಟ್ಟಿ ಅವರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಅವರ ಸೂಚನೆಯಂತೆ ಈ ಕಾರ್ಯಾಚರಣೆ ನಡೆಸಲಾಯಿತು. ಬಂಟ್ವಾಳ ನಗರ ಪೊಲೀಸ್ ಇನ್ಸ್ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ಸಂದೀಪ್ ಕುಮಾರ್ ಶೆಟ್ಟಿ ಮತ್ತು ದುರ್ಗಪ್ಪ, ಎಎಸ್ಐಗಳಾದ ನಾರಾಯಣ ಮತ್ತು ನವೀನ್ ಕುಮಾರ್, ಹಾಗೂ ಇತರೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.