ಬಂಟ್ವಾಳ, ಡಿ. 14 (DaijiworldNews/AA): ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿ 65 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇಪು ಗ್ರಾಮದ ಕುದ್ದುಪದವು-ಪೆರುವಾಯಿ-ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೈರ ಮೋನಪ್ಪ ಕುಲಾಲ್ (65) ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಓಮ್ನಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೋನಪ್ಪ ಕುಲಾಲ್ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಮೈರ ನಿವಾಸಿಗಳಾದ ಲಲಿತಾ ಕುಲಾಲ್ ಮತ್ತು ರಮಣಿ ಕುಲಾಲ್ ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪ್ರಾಥಮಿಕ ತಪಾಸಣೆ ನಡೆಸಿ, ಅಪಘಾತದ ಕಾರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.