ಬಂಟ್ವಾಳ, ಡಿ. 21 (DaijiworldNews/AK): ಕೇಪು ಗ್ರಾಮದ ಕೇಪು ಎಂಬಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ರವಿವಾರವೂ ಅಕ್ರಮ ಕೋಳಿ ಅಂಕ ನಡೆದಿದ್ದು, ಈ ಸಂಬಂಧ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ ಕುಂಪಲ ಮುರಳೀಧರ ರೈ, ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್ ,ಅಶೋಕ ಶೆಟ್ಟಿ ವಿಟ್ಲ , ರಾಜೇಶ್ ಬಾಳೆಕಲ್ಲು ಸಹಿತ 27 ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಪುವಿನ ಮುರಳೀಧರ ರೈಯವರಿಗೆ ಸೇರಿದ ಗದ್ದೆಯಲ್ಲಿ ರವಿವಾರ ಹಲವು ಜನರು ಸೇರಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಹಲವಾರು ಜನರು ಗುಂಪು ಸೇರಿಕೊಂಡು ಹಿಂಸಾತ್ಮಕವಾಗಿ ಕೋಳಿ ಅಂಕ ಆಟವಾಡುತ್ತಿರುವುದು ಕಂಡುಬಂದಿದೆ. ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿ 20 ಕೋಳಿಗಳು ಸ್ವಾಧೀನ ಪಡಿಸಿ, 20 ಜನರನ್ನು ವಶಕ್ಕೆ ಪಡೆಯಲಾಗಿದೆ, ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದೆ.
ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸೇರಿ ಒಟ್ಟು 27 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.