ಮಂಗಳೂರು, ಡಿ. 22 (DaijiworldNews/AA): ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಸ್ವಾಯತ್ತ ಸಂಸ್ಥೆ ಇ.ಡಿ. ಯ ದುರುಪಯೋಗವನ್ನು ಖಂಡಿಸಿ ದ.ಕ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಸೋಮವಾರ ಪೊಲೀಸರು ತಡೆದು, ವಶಕ್ಕೆ ಪಡೆದರು.






ಮಂಗಳೂರು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಬಳಿ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿ. ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ವಿರುದ್ಧದ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ಬಳಿಕ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಹೊರಟು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸಿ ಪಿವಿಎಸ್ ಬಳಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಮಲ್ಲಿಕಟ್ಟೆ ಸರ್ಕಲ್ ಬಳಿ ತಡೆದರು. ಪ್ರತಿಭಟನೆ ನಡೆಸಿದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಪ್ರಮುಖರಾದ ಎಂ.ಎ.ಗಪೂರ್, ಇನಾಯತ್ ಅಲಿ, ಸದಾಶಿವ ಉಳ್ಳಾಲ, ಕೆ.ಅಶ್ರಫ್, ಶಾಲೆಟ್ ಪಿಂಟೊ, ಅಪ್ಪಿ, ಅಬ್ದುಲ್ ರವೂಫ್, ಸುರೇಶ್ ಬಳ್ಳಾಲ್, ಎಂ.ಎಸ್ ಮುಹಮ್ಮದ್, ಶಶೀಧರ ಹೆಗ್ಡೆ, ಎಸ್ ಅಪ್ಪಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.