ಕುಂದಾಪುರ, ಫೆ. 09 (DaijiworldNews/AA): ಫಾರ್ಚುನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ರಸ್ತೆ ಪಕ್ಕದ ಚರಂಡಿಗೆ ಪಲ್ಟಿಯಾದ ಪರಿಣಾಮ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಣ್ಣುಕೆರೆಯ ನವಶಕ್ತಿ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಸೋಮವಾರ ಸಂಭವಿಸಿದೆ.





ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಡಿವೈಡರ್ ಮೇಲೆ ಹತ್ತಿ, ನಂತರ ವಿರುದ್ಧ ದಿಕ್ಕಿನ ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಮಹಾರಾಷ್ಟ್ರದ ಪುಣೆಯ ವಿವಿಧ ಕಾಲೇಜುಗಳಲ್ಲಿ ಕಾನೂನು ಮತ್ತು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಒಟ್ಟು 12 ಮಂದಿಯ ತಂಡ ಜನವರಿ 31 ರಂದು ಎರಡು ಕಾರುಗಳಲ್ಲಿ ದೇಶಾದ್ಯಂತ ಪ್ರವಾಸ ಹೊರಟಿತ್ತು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ಹಿಂತಿರುಗುತ್ತಿದ್ದಾಗ ತೆಕ್ಕಟ್ಟೆ ಸಮೀಪ ಈ ಅವಘಡ ಸಂಭವಿಸಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಧಾವಿಸಿ, ಪಲ್ಟಿಯಾಗಿದ್ದ ಕಾರಿನೊಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಅತಿಯಾದ ವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅಪಘಾತದ ಸಮಯದಲ್ಲಿ ವಿದ್ಯಾರ್ಥಿಗಳು ಮದ್ಯಪಾನ ಮಾಡಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.