ಉಡುಪಿ, ಫೆ. 23 (DaijiworldNews/AA): ಅಸಲಿ ಹುಲಿ ಉಗುರು ಎಂದು ನಂಬಿಸಿ ನಕಲಿ ಉಗುರನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸನ್ಯಾಸಿಯ ವೇಷ ಧರಿಸಿದ್ದ ಆರೋಪಿಯು, ತನ್ನ ಬಳಿ ಇರುವ ಹುಲಿ ಉಗುರು ಅಸಲಿಯದು ಎಂದು ಜನರನ್ನು ನಂಬಿಸಲು ಪ್ರಯತ್ನಿಸುತ್ತಿದ್ದನು. ಈತನ ನಡವಳಿಕೆಯಿಂದ ಅನುಮಾನಗೊಂಡ ಸಾರ್ವಜನಿಕರು ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮತ್ತು ತಾರಾನಾಥ್ ಮೇಸ್ತ ಶಿರೂರು ಅವರು ಕಾರ್ಯಾಚರಣೆಗೆ ಸಹಕರಿಸಿದರು. ಈ ವೇಳೆ ಆರೋಪಿಯು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಉಡುಪಿ ನಗರ ಠಾಣೆಯ ಪೊಲೀಸರು ಹಳೆ ಬಸ್ ನಿಲ್ದಾಣದ ಬಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.