ಬೆಳ್ತಂಗಡಿ, ಮಾ. 24 (DaijiworldNews/TA): ದಶಕದ ಹಿಂದೆ ನಡೆದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.

ಈ ಸಂಬಂಧ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯವು ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ. ಈ ಹಿಂದೆ ಹೈಕೋರ್ಟ್ ಮರುತನಿಖೆಯ ಅರ್ಜಿಯನ್ನು ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಸಂತ್ರಸ್ತೆಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಏಕೈಕ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು.
ಈ ತೀರ್ಪಿನ ಬೆನ್ನಲ್ಲೇ ಕರಾವಳಿಯಾದ್ಯಂತ ಮರುತನಿಖೆಗೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಈಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿರುವುದು ಸಮಾಜದಲ್ಲಿ ಹೊಸ ಭರವಸೆ ಮೂಡಿಸಿದೆ. ಹೈಕೋರ್ಟ್ ತೀರ್ಪನ್ನು ಪರಾಮರ್ಶಿಸಲಿರುವ ಸುಪ್ರೀಂ ಕೋರ್ಟ್, ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಹೊಸ ತನಿಖೆಯ ಅಗತ್ಯವಿದೆಯೇ ಎಂಬ ಬಗ್ಗೆ ಮುಂದಿನ ವಿಚಾರಣೆಯಲ್ಲಿ ತೀರ್ಮಾನಿಸಲಿದೆ.