ಮಂಗಳೂರು, ಮಾ. 26 (DaijiworldNews/AA): ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊAಡ ಆರೋಪದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ನಿವಾಸಿ ಪವನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.
ಪ್ರಕರಣದ ಹಿನ್ನೆಲೆ:
2025ರಲ್ಲಿ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವವರ ಕೊಲೆಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವಂತಹ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪ ಈತನ ಮೇಲಿದೆ. ತನಿಖೆಯ ವೇಳೆ ‘TN-MADDY' ಎಂಬ ಖಾತೆಯಿಂದ ಈ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚುತ್ತಿದ್ದುದು ಪವನ್ ಎಂಬುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಯನ್ನು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲೂ ಮತ್ತೊಂದು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.