ಕುಂದಾಪುರ, ಮಾ. 26 (DaijiworldNews/AA): ಮುಂಬರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ದಾಖಲಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ಕುಂದಾಪುರದ ಕೋಟೇಶ್ವರದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷದ ಪರವಾಗಿ ಒಲವು ತೋರುತ್ತಾರೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಮನೆಗೆ ತಲುಪಿವೆ. ಈ ಯೋಜನೆಗಳಿಂದ ಕೇವಲ ಅಭಿವೃದ್ಧಿಯಷ್ಟೇ ಅಲ್ಲದೆ, ಜನರ ಆದಾಯವೂ ವೃದ್ಧಿಸಿದೆ. ವಿಶೇಷವಾಗಿ ಮಹಿಳಾ ಮತದಾರರು ಸರ್ಕಾರದ ಕಾರ್ಯವೈಖರಿಯ ಬಗ್ಗೆ ತೃಪ್ತರಾಗಿದ್ದಾರೆ ಎಂದು" ತಿಳಿಸಿದರು.
"ಪ್ರಜಾಪ್ರಭುತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳಿರುವುದು ಸಹಜ, ಆದರೆ 'ಗೆಲುವು' ಒಂದೇ ನಮಗೆ ಮಾನದಂಡ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಕುಟುಂಬದ ಸದಸ್ಯರಿಗೇ ಟಿಕೆಟ್ ನೀಡಲಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧರಿದ್ದೇವೆ" ಎಂದರು.
ವಾರಾಹಿ ಯೋಜನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, "ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಎರಡೂ ಬದಿಯ ರೈತರು ಮನವಿ ಸಲ್ಲಿಸಿದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.
ಬೈಂದೂರಿನ ಹೊಸ ಬಸ್ ನಿಲ್ದಾಣಕ್ಕೆ ಕೆಲವು ಸರ್ಕಾರಿ ಬಸ್ಗಳು ಪ್ರವೇಶಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.