ಮಂಗಳೂರು, ಏ. 01 (DaijiworldNews/AA): ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಅಶೋಕ್ ನಗರ ನಿವಾಸಿ ಸುಹಾನ್ ಅಲಿಯಾಸ್ ಸೋನು (33) ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ಧ 2016 ಮತ್ತು 2017ರಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಉರ್ವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯವು ಆರೋಪಿಯ ವಿರುದ್ಧ ಎಲ್ಪಿಸಿ ವಾರಂಟ್ ಹೊರಡಿಸಿತ್ತು.
ಮಾರ್ಚ್ 29 ರಂದು ಉರ್ವಾ ಪೊಲೀಸ್ ಠಾಣೆಯ ಎಎನ್ಐ ಲಕ್ಷ್ಮಣ್ ಮತ್ತು ಅವರ ತಂಡವು ಆರೋಪಿಯನ್ನು ಮುಂಬೈನಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.