ಬಂಟ್ವಾಳ, ಜೂ. 04 (DaijiworldNews/AA): ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪದ ಸೂರಿಕುಮೇರಿನಲ್ಲಿ ಬುಧವಾರ ಸಂಜೆ ನಡೆದಿದೆ.

ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ.
ಹೇಮಂತ್ ಅವರು ತಮ್ಮ ಪತ್ನಿ, ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೈಕ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೂರಿಕುಮೇರು ಸಮೀಪ ತಲುಪುತ್ತಿದ್ದಂತೆ ಎದುರಿನಿಂದ ಬಂದ ಸ್ಕೂಟರ್ ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ನೈರುತಿ ಕಾಂಕ್ರೀಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರಿಗೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಮೃತ ನೈರುತಿ ಸ್ಥಳೀಯ ಪ್ರಾಥಮಿಕ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಭಜನಾ ಗಾಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಆಕೆ, ಭಜನೆ ತರಬೇತಿಯನ್ನೂ ಪಡೆಯುತ್ತಿದ್ದಳು ಎನ್ನಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸ್ ಉಪನಿರೀಕ್ಷಕ ಆದರ್ಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.