ಮಂಗಳೂರು, ಜೂ. 12 (DaijiworldNews/TA): ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ ಸುಮಾರು 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಗೂ ಘೋಷಣೆಗಳ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಭರ್ಜರಿ ಸ್ವಾಗತ ಕೋರಿದರು. 'ದಳಪತಿ' ವಿಜಯ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ ವಿಜಯ್, ನಗುಮುಖದೊಂದಿಗೆ ಕೈಬೀಸಿ ಶುಭಾಶಯ ಕೋರಿದರು. ಬಳಿಕ ಅವರು ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದತ್ತ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿರುವ ವಿಜಯ್ ಅವರ ಭೇಟಿ ರಾಜಕೀಯ ಹಾಗೂ ಅಭಿಮಾನಿ ವಲಯಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.