ಉಡುಪಿ, ಜೂ. 12 (DaijiworldNews/TA): ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ ಸಿಎಂ ವಿಜಯ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಅರ್ಚಕ ವೃಂದ ಮಂತ್ರಘೋಷದೊಂದಿಗೆ ಅವರನ್ನು ದೇವಾಲಯದ ಒಳಗೆ ಬರಮಾಡಿಕೊಂಡಿತು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿರುವ ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರು ಹಾಗೂ ಅಭಿಮಾನಿಗಳ ಗಮನ ಸೆಳೆದಿತ್ತು. ಸರ್ಕಾರದ ಪ್ರೋಟೋಕಾಲ್ ಅನ್ವಯ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಗೌರವ ಸಲ್ಲಿಸಲಾಯಿತು.
ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಸ್ಥಾನದ ಆವರಣವನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.