ಉಡುಪಿ, ಜೂ. 24 (DaijiworldNews/AA): ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಡುಪಿ ಪೊಲೀಸರು ಹಾವೇರಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲಾ (66) ಎಂದು ಗುರುತಿಸಲಾಗಿದೆ.
1990ರ ಜೂನ್ 21ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮರುದಿನವೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ನೂರುಲ್ಲಾ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.
ಆದರೆ, ನಂತರ ನಡೆದ ವಿಚಾರಣೆಗಳಿಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು.
ಖಚಿತ ಮಾಹಿತಿ ಮೇರೆಗೆ ಉಡುಪಿ ಪೊಲೀಸರ ತಂಡವೊಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರಿಗೆ ತೆರಳಿ, ಜೂನ್ 22ರಂದು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದೆ.
36 ವರ್ಷಗಳ ಸುದೀರ್ಘ ಅವಧಿಯ ನಂತರ ಪತ್ತೆಯಾದ ಆರೋಪಿಯನ್ನು ವಾರಂಟ್ನೊಂದಿಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದಶಕಗಳಿಂದ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಉಡುಪಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.