ಮಂಗಳೂರು, ಜೂ. 30 (DaijiworldNews/AA): ಕೇಂದ್ರ ಸರಕಾರದಲ್ಲಿ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಗುತ್ತಿರುವ ವಿಶೇಷ ಸಹಕಾರ ಸಪ್ತಾಹಕ್ಕೆ ಸೋಮವಾರ ಮಂಗಳೂರಿನಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು, "ನಮಗೆ ಪಕ್ಷ ಇಲ್ಲ. ನಮ್ಮ ಪಕ್ಷವೇ ಸಹಕಾರಿ ಪಕ್ಷ. ಸಹಕಾರ ಚಳುವಳಿಯಿಂದಲೇ ದೇಶದ ಅಭಿವೃದ್ಧಿ ಎಂಬ ತತ್ವದಲ್ಲಿ ನಂಬಿಕೆ ಇಟ್ಟವರು ನಾವು. ರಾಜ್ಯದಲ್ಲಿ 47,000ಕ್ಕೂ ಹೆಚ್ಚು ಸಹಕಾರಿ ಸಂಘಗಳಿವೆ. ವಾಣಿಜ್ಯ ಬ್ಯಾಂಕ್ ಗಳಲ್ಲಿ ಜನಸಾಮಾನ್ಯರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ, ಸಹಕಾರಿ ಬ್ಯಾಂಕ್ ಗಳು ಬಡವರಿಗೆ, ಜನಸಾಮಾನ್ಯರಿಗೆ ಮುಕ್ತ ಅವಕಾಶವನ್ನು ಕಲ್ಪಿಸಿವೆ. ಸಹಕಾರ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲರೂ ಒಗ್ಗಟ್ಟಾಗಿ ದೇಶವನ್ನು ಅಭಿವೃದ್ಧಿ ಪಡಿಸೋಣ" ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಡಿ. ಕಾಮತ್, "ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಎನ್.ರಾಜೇAದ್ರ ಕುಮಾರ್ ಅವರಿಂದ ಸಹಕಾರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಆಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಇನ್ನು ಮುಂದಕ್ಕೂ ಇಂತಹ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು" ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, "ಇಂದು ಸಹಕಾರ ಸಂಘಗಳು ಕೇವಲ ಸಾಲ ನೀಡುವ ಸಂಸ್ಥೆಗಳಾಗಿ ಉಳಿದಿಲ್ಲ. ವಿವಿಧ ಸೇವೆಗಳನ್ನು ಒದಗಿಸಲು ಅವಶಾಶ ಲಭಿಸಿದ್ದು, ವಿವಿಧೋದ್ದೇಶ ಸಹಕಾರ ಸಂಸ್ಥೆಗಳಾಗಿ ಬೆಳವಣಿಗೆ ಹೊಂದುತ್ತಿವೆ" ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ್, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು.
ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು. ಪ್ರಾರಂಭದಲ್ಲಿ ಸಹಕಾರಿ ಧ್ವಜಾರೋಹಣ ನೆರವೇರಿಸಲಾಯಿತು.