ಮಂಗಳೂರು, ಜು. 01 (DaijiworldNews/AA): ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ.


ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಆಧಾರದ ಮೇಲೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ರಜೆ ಘೋಷಿಸಿದ್ದಾರೆ.
ಹವಾಮಾನದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಿದ್ದಾರೆ. ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ನದಿ ತೀರಗಳು ಅಥವಾ ಸಮುದ್ರ ತೀರದ ಹತ್ತಿರ ಹೋಗದಂತೆ ಎಚ್ಚರವಹಿಸಲು ಪೋಷಕರಿಗೆ ಸಲಹೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಇರಬೇಕು. ಯಾವುದೇ ಲೋಪವಿಲ್ಲದಂತೆ ವಿಪತ್ತು ನಿರ್ವಹಣೆ ಕಾರ್ಯ ಕೈಗೊಳ್ಳಬೇಕು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಕಡಲತೀರಗಳಿಗೆ ಭೇಟಿ ನೀಡದಂತೆ ಎಚ್ಚರಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಎಲ್ಲಾ ತಾಲೂಕುಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲು ಮತ್ತು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಲು ನಿರ್ದೇಶನ ನೀಡಲಾಗಿದೆ.
ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಕೋರಿದೆ. ಸಹಾಯಕ್ಕಾಗಿ ಜಿಲ್ಲಾ ನಿಯಂತ್ರಣ ಕೊಠಡಿಯನ್ನು 0824-2220588 ಸಂಖ್ಯೆಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಥವಾ ಸಂಪರ್ಕಕ್ಕಾಗಿ dc.mnglr@gmail.com ಇಮೇಲ್ ವಿಳಾಸವನ್ನು ಬಳಸಬಹುದಾಗಿದೆ.