ಬಂಟ್ವಾಳ, ಜು. 06 (DaijiworldNews/AA): ಕಾಲೇಜು ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ಎಸಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.

ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಹಲ್ಲೆ ನಡೆಸಿದ ಆರೋಪಿ.
ಇಂದು ಬೆಳಗ್ಗೆ ಸುಮಾರು 8.45 ಗಂಟೆಗೆ ವಿದ್ಯಾರ್ಥಿನಿಯು ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದಾಗ ಸ್ಥಳಕ್ಕೆ ಬಂದ ಆರೋಪಿಯು ಮಚ್ಚಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಹಲ್ಲೆ ಮಾಡಿರುತ್ತಾನೆ.
ಕೃತ್ಯ ನಡೆಸಿದ ಬಳಿಕ ಆರೋಪಿಯು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಬಾಲಕಿಯು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಸ್ತುತ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯ ವಿಚಾರಣೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.