ಮಂಗಳೂರು, ಜು. 20 (DaijiworldNews/AA): ಭಾರೀ ಮಳೆಯ ನಡುವೆಯೇ ಬೃಹತ್ ಮರವೊಂದು ಬೇರುಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ಮಂಗಳೂರಿನ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜು ಸಮೀಪದ ಒಳರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಹಾನಿಗೊಳಗಾಗಿದ್ದರೂ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಭಾರೀ ಗಾಳಿ ಮತ್ತು ಮಳೆಯ ಪರಿಣಾಮ ಮರ ಏಕಾಏಕಿ ಉರುಳಿ ಕಾರಿನ ಮೇಲೆ ಬಿದ್ದಿದೆ. ಮರದ ಬೃಹತ್ ಕೊಂಬೆಗಳು ಪಕ್ಕದಲ್ಲಿದ್ದ ಕ್ಯಾಂಟೀನ್ ಮೇಲೂ ಬಿದ್ದ ಪರಿಣಾಮ ಕ್ಯಾಂಟೀನ್ ಕಟ್ಟಡಕ್ಕೂ ಹಾನಿಯಾಗಿದೆ. ಘಟನೆಯ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದರು. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದಿದ್ದರಿಂದ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಕಾರ್ಯಾಚರಣೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಂಡರು.