ಉಡುಪಿ, ಜು. 23 (DaijiworldNews/TA): ಕಾಪು ತಾಲೂಕಿನ ಬಡಾ ಗ್ರಾಮದ ಯೆರ್ಮಾಲ್ನಲ್ಲಿ ಪಾನ್ ಸ್ಟಾಲ್ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬನನ್ನು ಬಂಧಿಸಿ 625.83 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಅನಿಲ್ ಎಂದು ಗುರುತಿಸಲಾಗಿದೆ. ಯೆರ್ಮಾಲ್ನಲ್ಲಿರುವ ಅನಿಲ್ ಪ್ಯಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿಯ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಾಳಿಯ ವೇಳೆ ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ 625.83 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಕಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐಗಳಾದ ಶಕ್ತಿವೇಲು ಮತ್ತು ಅನಿಲ್ ಕುಮಾರ್ ಟಿ. ನಾಯಕ್, ಎಎಸ್ಐ ಗಿರೀಶ್ ಯು.ಆರ್., ಹಾಗೂ ಪೊಲೀಸ್ ಸಿಬ್ಬಂದಿಗಳಾದ ಕೃಷ್ಣಪ್ರಸಾದ್, ಮಿಥುನ್, ಸಂದೇಶ್ ಭಂಡಾರಿ, ರಾಘವೇಂದ್ರ ಸೇರಿದಂತೆ ಇತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಉಡುಪಿ ಜಿಲ್ಲಾ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ, ವಶಪಡಿಸಿಕೊಂಡ ಮಾದಕ ವಸ್ತುವನ್ನು ಪರಿಶೀಲಿಸಿ ತನಿಖಾ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿತು. ಬಂಧಿತ ಅನಿಲ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.