ಉಡುಪಿ, ಆ. 04 (DaijiworldNews/AA): ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 4 (ಮಂಗಳವಾರ) ರಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ಉಡುಪಿ ಜಿಲ್ಲಾಡಳಿತವು ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದೆ. ಆದರೆ ಪಿಯು ಕಾಲೇಜುಗಳು, ಡಿಪ್ಲೊಮಾ ಸಂಸ್ಥೆಗಳು, ಐಟಿಐಗಳು, ಪದವಿ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.
ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 1077 ಅಥವಾ 0820-2574802(ಡಿಸಿ ಕಚೇರಿ) ಯನ್ನು ಸಂಪರ್ಕಿಸಬಹುದಾಗಿದೆ.