ಕಾಸರಗೋಡು, ಆ. 12 (DaijiworldNews/TA): ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತೃಕ್ಕರಿಪುರದಲ್ಲಿ ಮಂಗಳವಾರ ಸಂಜೆ ನಡೆದಿದೆ. ತೃಕ್ಕರಿಪುರ ಬೀರಿಚೇರಿ ಕೂಲೇರಿಯ ಕೆ. ಪಿ. ನಿಸಾರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.

ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಗ್ಯಾಸ್ ಸೋರಿಕೆಯಾಗಿ ಅನಾಹುತ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಸಿಲಿಂಡರ್ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಒಳಗಿನ ಭಾಗ ಸಂಪೂರ್ಣವಾಗಿ ಧ್ವಂಸಗೊಂಡಿದ್ದು ಮನೆಯಲ್ಲಿದ್ದ ಬೆಲೆಬಾಳುವ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಎಲ್ಲಾ ಗೃಹಬಳಕೆಯ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಅಪಘಾತದ ಸಮಯದಲ್ಲಿ ಮನೆಯೊಳಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ಜನ ಇದ್ದರು. ಗ್ಯಾಸ್ ಸೋರಿಕೆಯಾಗಿ ಬೆಂಕಿ ಆವರಿಸುತ್ತಿರುವುದನ್ನು ಗಮನಿಸಿದ ತಕ್ಷಣ, ಅವರೆಲ್ಲರೂ ಸಮಯಪ್ರಜ್ಞೆ ಮೆರೆದು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಅವರು ಮನೆಯಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸದೆ, ಒಂದು ದೊಡ್ಡ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತೃಕ್ಕರಿಪುರದಿಂದ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.