ಪುತ್ತೂರು, ಆ. 16 (DaijiworldNews/TA): ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ದಾಳಿ ನಡೆಸಿ, ಅಕ್ರಮವಾಗಿ ಮರ ಸಾಗಿಸುತ್ತಿದ್ದ ಲಾರಿ ಮತ್ತು ಮರದ ದಿಮ್ಮಿಗಳನ್ನು ಆರೋಪಿ ಸಮೇತ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಾಡಾವು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ, ನೆಟ್ಟಾರು ಎಂಬಲ್ಲಿ ಕಿರಾಲು ಬೋಗಿ ಮರಗಳನ್ನು ಅಕ್ರಮವಾಗಿ ಕಡಿದು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮವಾಗಿ ಮರ ಸಾಗಣೆಯಾಗುತ್ತಿರುವುದು ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಸಂತೋಷ್ ರೈ, ಉಪ ವಲಯ ಅರಣ್ಯ ಅಧಿಕಾರಿಗಳಾದ ಶಿವಾನಂದ್ ಮತ್ತು ಸೋಮನಾಥ್, ವಾಹನ ಚಾಲಕ ಜಯಪ್ರಕಾಶ್ ಭಾಗವಹಿಸಿದ್ದರು.