ಉಡುಪಿ, ಸೆ.13 (DaijiworldNews/AA): ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸವಾರ ಅಪಾಯದಿಂದ ಪಾರಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಸವಾರ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಸವಾರ ರಸ್ತೆಯ ಮಧ್ಯದಲ್ಲೇ ಸ್ಕೂಟರ್ ನಿಲ್ಲಿಸಿ, ತಕ್ಷಣ ವಾಹನದಿಂದ ದೂರ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ.
ಬಳಿಕ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಸ್ಕೂಟರ್ಗೆ ನೀರು ಸುರಿದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಕೂಟರ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.