ಮಂಗಳೂರು, ಅ.05 (DaijiworldNews/AK) : ಭಾನುವಾರ ಸಂಜೆ ಪಣಂಬೂರು ಬೀಚ್ನಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ 14 ವರ್ಷದ ಬಾಲಕ ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ನಾಪತ್ತೆಯಾದ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ರೆಂಕೆದ ಗುತ್ತು ನಿವಾಸಿ ಸೇಸಪ್ಪ ಎಂಬವರ ಪುತ್ರ ಶ್ರೇಯಸ್ (14) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಶ್ರೇಯಸ್ ತನ್ನ ಐದು ಸ್ನೇಹಿತರೊಂದಿಗೆ ಬೀಚ್ಗೆ ಭೇಟಿ ನೀಡಿದ್ದರು. ಗುಂಪು ನೀರಿನಲ್ಲಿ ಆಟವಾಡುತ್ತಿದ್ದಾಗ ಈ ವೇಳೆ ಸಮುದ್ರದ ಭಾರೀ ಅಲೆಯ ಹೊಡೆತಕ್ಕೆ ಸಿಲುಕಿ ಆತ ಸಮುದ್ರ ಪಾಲಾಗಿದ್ದಾನೆ ಎಂದು ಹೇಳಲಾಗಿದೆ.
ಬಾಲಕನ ಸ್ನೇಹಿತರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಶ್ರೇಯಸ್ ತಂದೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾದ ಬಾಲಕ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.