ಮಂಜೇಶ್ವರ, ನ.21 (DaijiworldNews/TA): ಬಾಯಾರಿನಿಂದ ಉಪ್ಪಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಣ್ಣಂಕುಳಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಗಾಯಾಳುಗಳನ್ನು ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಂತ್ರಿಕ ದೋಷದಿಂದಾಗಿ ಸರಕು ಸಾಗಣೆ ಲಾರಿಯನ್ನು ಕಳೆದ ಎರಡು ದಿನಗಳಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.