ಮಂಗಳೂರು, ಜ 08 (DaijiworldNews/SM): ಪೌರತ್ವ ತಿದುಪಡಿ ಕಾಯ್ದೆ ವಿರೋಧಿಸಿ ನಾಳೆ ಅಡ್ಯಾರ್ ನ ಕಣ್ಣೂರಿನಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಮಂಗಳೂರಿಗೆ ಭೇಟಿಯನ್ನು ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡದೆ ಕೊನೆಗೂ ಕಣ್ಣೂರು ಬಳಿ ಮುಸ್ಲಿ ಸಂಘಟನೆಗಳು ಪ್ರತಿಭಟನೆಯನ್ನು ಆಯೋಜಿಸಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಪರಿಶೀಲಿಸುವ ನಿಟ್ಟಿನಲ್ಲಿ ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಇಂದು ಸಂಜೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಆಗಮಿಸಿದ್ದು, ಭದ್ರತೆ ಪರಿಶೀಲನೆ ನಡೆಸಿದರು. ಅಲ್ಲದೆ ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬೇಡಿ ಎಂದು ಸೂಚಿಸಿದರು.
ಈಗಾಗಲೇ ಕಾನೂನು ಸುವ್ಯವಸ್ಥೆ ಸಂಬಂಧ ಡಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಹೆಚ್ಚಿನ ಭದ್ರತೆಗಾಗಿ ಹೊರ ಜಿಲ್ಲೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅರೆ ಸೇನಾ ಪಡೆ, ಕೆಎಸ್ ಆರ್ ಪಿ ಸೇರಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಇನ್ನು ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಇನ್ನು ಆಯೋಜಕರು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ಎಲ್ಲಾ ಸೂಚನೆ ಕೊಟ್ಟಿದ್ದೇವೆ. ಸಂಜೆ ಆರು ಗಂಟೆಯವರೆಗೂ ಅವರಿಗೆ ಕಾರ್ಯಕ್ರಮ ನಡೆಸಲು ಅನುಮತಿ ಇದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷಾ ಹೇಳಿದ್ದಾರೆ.