ಬೆಂಗಳೂರು, ಏ.26(DaijiworldNews/TA): ಕರ್ನಾಟಕದಲ್ಲಿನ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶವನ್ನು ನೀಡಿತ್ತು.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನವನ್ನು ನೀಡಿತ್ತು.
ಆಗ ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳುಗಳ ಕಾಲಾವಕಾಶ ನೀಡಲಾಗಿದೆ. ಸದ್ಯ ಹೈಕೋರ್ಟ್ ಆದೇಶ ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಮಾಡಲು ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಲಾಗಿತ್ತು.