ನವದೆಹಲಿ, ಏ.29 (DaijiworldNews/AK): ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ಈ ಘಟನೆಯ ಬಗ್ಗೆ ಸಾಮೂಹಿಕ ಪ್ರತಿಕ್ರಿಯೆಯನ್ನು ಆಲಿಸಲು ಎರಡೂ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಲಾಗಿದೆ. ಇಂತಹ ಅಧಿವೇಶನವು ಸಂಸತ್ತು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಬೆದರಿಕೆಗಳನ್ನು ಎದುರಿಸಲು, ದೇಶದ ಬಗ್ಗೆ ದೃಢ ಸಂಕಲ್ಪ ಪ್ರದರ್ಶಿಸಲು ನೆರವಾಗುತ್ತದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಮಯದಲ್ಲಿ ಏಕತೆ ಮತ್ತುಒಗ್ಗಟ್ಟು ದೇಶಕ್ಕೆ ಬಹಳ ಮುಖ್ಯ ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು.