ಜೈಪುರ, ಜು. 25 (DaijiworldNews/AA): ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿ, 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಇಂದು ಬೆಳಗ್ಗೆ ಝಲಾವರ್ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಈ ಅವಘಡ ಸಂಭವಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಮಕ್ಕಳನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ.
ಮೃತಪಟ್ಟ ಮಕ್ಕಳ ಶವಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.
ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.
ಇನ್ನು ಈ ಅವಘಡದಲ್ಲಿ ಸಾವನ್ನಪ್ಪಿದ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಎಂದು ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.