ಡೆಹ್ರಾಡೂನ್, ಜು. 27 (DaijiworldNews/AA): ಹರಿದ್ವಾರದ ಮಾನಸದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಹರಿದ್ವಾರದ ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರಿ ಜನಸಂದನಿ ಉಂಟಾದ ಹಿನ್ನೆಲೆ ಕಾಲ್ತುಳಿತ ಸಂಭವಿಸಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ.
ಭಾನುವಾರ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದ ಮೇಲೆ ಹಠಾತ್ತನೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಬಿದ್ದ ಪರಿಣಾಮ ಜನರು ಚೆಲ್ಲಾಪಿಲ್ಲಿಯಾಗಿ ಓಡಲು ಪ್ರಾರಂಭಿಸಿದ್ದಾರೆ. ಅಲ್ಲಿದ್ದ ಭಕ್ತರಲ್ಲಿ ಕಾಲ್ತುಳಿತ ಉಂಟಾಯಿತು.
ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಯಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನಾ ಸ್ಥಳಕ್ಕೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.