ಬೆಂಗಳೂರು, ಅ. 28 (DaijiworldNews/AK):ಆರ್ಎಸ್ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಸಂಘರ್ಷ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಪಥಸಂಚಲನ ಅಥವಾ ಚಟುವಟಿಕೆಗಳನ್ನು ನಿರ್ಬಂಧಿಸಿ (ನೇರವಾಗಿ ಆರ್ಎಸ್ಎಸ್ ಹೆಸರಿಸಿಲ್ಲ) ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇದು ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಸರ್ಕಾರ, ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಪೀಠ ತಡೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸರ್ಕಾರದ ಆದೇಶ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಸಂಬಂಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೇಲ್ಮನವಿ ಸಲ್ಲಿಸಲು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.