ಶ್ರೀನಗರ, ನ. 15 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿನ ನೌಗಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾದವು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದವರೆಗೆ ಚದುರಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಶುಕ್ರವಾರ ತಡರಾತ್ರಿ 11:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಈವರೆಗೆ 9 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿತ್ತು. ಹೀಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುವುದೂ ಒಂದು ಗಂಟೆ ತಡವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸದ್ಯ ತನಿಖಾ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯು ಐಇಡಿ ಪಿತೂರಿ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ 2 ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.
ಪೊಲೀಸ್ ಠಾಣೆಯಲ್ಲೇ ಸಂಗ್ರಹಿಸಲಾಗಿದ್ದ ಸುಮಾರು 360 ಕಿಗ್ರಾಂ ನಷ್ಟು ಅಮೋನಿಯಂ ನೈಟ್ರೇಟ್ ಸ್ಫೋಟಕ ವಸ್ತುಗಳನ್ನ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸೀಲ್ ಮಾಡುವಾಗ ಸ್ಫೋಟಗೊಂಡಿರಬಹುದು ಎಂಬ ಸಂಶಯದ ಮೇರೆಗೆ ಅಧಿಕಾರಿಗಳ ನಿರ್ಲಕ್ಷ್ಯವಿರಬಹುದು ಎಂದು ತನಿಖೆ ನಡೆಯುತ್ತಿದೆ.
ಪೊಲೀಸ್ ಠಾಣೆ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಕಾರಿನಲ್ಲಿ ಐಇಡಿ ಇರಿಸಲಾಗಿತ್ತು. ಇದರಲ್ಲಿ ಅಮೋನಿಯಂ ನೈಟ್ರೇಟ್ ಇದ್ದ ಕಾರಣ ಸ್ಫೋಟದ ಪ್ರಮಾಣ ದೊಡ್ಡಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ ಹಿನ್ನೆಲೆ ಇದು ಭಯೋತ್ಪಾದಕ ಕೃತ್ಯ ಎಂದು ಶಂಕಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಇನ್ನು ಜೈಶ್ ಎ ಮೊಹಮ್ಮದ್ನ ಮುಖವಾಣಿ ಪಿಎಎಫ್ಎಫ್ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.