ಬೆಂಗಳೂರು, ನ. 27 (DaijiworldNews/ AK): ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದೂರದೃಷ್ಟಿಯ ಯೋಜನೆ
ಅಕ್ಟೋಬರ್ 2, 2025 ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷಗಳು ತುಂಬಿರುವುದು ಮೈಲುಗಲ್ಲು ಸಾಧನೆಯಾಗಿದೆ. ಭಾರತದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್. ಎಪ್ಪತ್ತರ ದಶಕದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ,ಶಿಶು ಮತ್ತು ತಾಯಿಮರಣ ಹೆಚ್ಚಿದ ಸಂದರ್ಭದಲ್ಲಿ ಈ ಕಾರ್ಯಕ್ರಮ ಜಾರಿಯಾಗಿತ್ತು. ಶ್ರೀಮತಿ ಇಂದಿರಾಗಾಂಧಿಯವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಠಿಕತೆ ನಿವಾರಿಸುವ ಉದ್ದೇಶದಿಂದ ಜಾರಿ ಮಾಡಿದರು. ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಈ ಕೇಂದ್ರಗಳಿಂದ ಲಾಭ ಪಡೆಯುತ್ತಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಮಕ್ಕಳ ಆರೈಕೆ ಉದಾತ್ತವಾದ ಕೆಲಸ
ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರಾಮಾಣಿಕ ಸೇವೆಸಲ್ಲಿಸುತ್ತಿದ್ದು, ಮಕ್ಕಳ ಆರೈಕೆಯಲ್ಲಿ ನಿರತವಾಗಿರುವ ಎರಡನೇ ತಾಯಿಯಂತೆ ಎಂದು ಮುಖ್ಯಮಂತ್ರಿಗಳು ಅಭಿನಂಧಿಸಿದರು.
ಇದು ಉದಾತ್ತವಾದ ಕೆಲಸ. ಮಕ್ಕಳು ದೇಶದ ಮುಂದಿನ ಭವಿಷ್ಯ. ಐಸಿಡಿಎಸ್ ಕಾರ್ಯಕ್ರಮದಿಂದ ಶಿಶು ಹಾಗೂ ತಾಯಿಮರಣ ಗಣನೀಯವಾಗಿ ಕಡಿಮೆಯಾಗಿದೆ. ವಿವಿಧೋದ್ದೇಶ ಸಹಕಾರ ಸಂಘವನ್ನು ಪ್ರಾರಂಭಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ಮಹಿಳೆಯರಲ್ಲಿ ಶೇ ನೂರರಷ್ಟು ಸಾಕ್ಷರತೆ, ವೈಚಾರಿಕ ಹಾಗೂ ವೈಜ್ಞಾನಿಕ ಜ್ಞಾನ ಬರಬೇಕಿದೆ
ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗದೆ ಹೋದರೆ,ಸಮಾಜ ಮುಂದುವರೆಯುವುದು ಕಷ್ಟ. ಸಮಾಜದಲ್ಲಿ ಅಸಮಾನತೆ ಇದ್ದು , ಮಹಿಳೆಯರೂ ಕೂಡ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಸುಶಿಕ್ಷಿತರಾಗುತ್ತಿರುವುದು ಸಂತಸದ ಸಂಗತಿ. ಮಹಿಳೆಯರಲ್ಲಿ ಶೇ ನೂರರಷ್ಟು ಸಾಕ್ಷರತೆ ಬರಬೇಕಲ್ಲದೆ ವೈಚಾರಿಕ ಹಾಗೂ ವೈಜ್ಞಾನಿಕ ಜ್ಞಾನ ಬರಬೇಕಿದೆ ಎಂದರು.