ಮಂಡ್ಯ , ಡಿ. 05 (DaijiworldNews/AK):ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ "ಕೃಷಿ ಮೇಳ 2025" ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.