ಪಣಜಿ, ಡಿ. 07 (DaijiworldNews/TA): ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ ಪ್ರದೇಶದಲ್ಲಿರುವ ಪ್ರಸಿದ್ಧ ನೈಟ್ ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಮತ್ತು ಗಾಯಾಳುಗಳಿಗೆ ರೂ. 50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದೆ.
“ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಬೆಂಕಿ ದುರಂತ ಹೃದಯವಿದ್ರಾವಕ. ಮೃತಪಟ್ಟವರ ಕುಟುಂಬಗಳಿಗೆ ರೂ. 2 ಲಕ್ಷ ಮತ್ತು ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುತ್ತದೆ. ಘಟನೆಯ ಪರಿಸ್ಥಿತಿಯ ಕುರಿತು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ.” ಎಂದು ಹೇಳಿದ್ಧಾರೆ.
ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ, ಕ್ಲಬ್ ಮುಚ್ಚುವ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯ ಬಳಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟವೇ ಬೆಂಕಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆ ಇನ್ನಷ್ಟು ಹೆಚ್ಚಾಗಿ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಟ್ಟಡದ ಬಹುತೇಕ ಭಾಗಕ್ಕೆ ವ್ಯಾಪಿಸಿತು. ಅಗ್ನಿಶಾಮಕ ದಳದ ಅನೇಕ ವಾಹನಗಳು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವುದಕ್ಕೆ ಹಲವು ಗಂಟೆಗಳು ಬೇಕಾಯಿತು. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಗೋವಾ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದ್ದು, ಹಲವರಿಗೆ ತೀವ್ರ ಸುಟ್ಟ ಗಾಯಗಳಿವೆ. ಮೃತರಲ್ಲಿ ಹೆಚ್ಚಿನವರು ಕ್ಲಬ್ ಸಿಬ್ಬಂದಿ ಎಂಬುದು ಪ್ರಾಥಮಿಕ ಮಾಹಿತಿ. ಘಟನೆಯು ರಾಜ್ಯದಾದ್ಯಂತ ಆಘಾತ ಮೂಡಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.