ತಿರುವನಂತಪುರಂ, ಜ. 20 (DaijiworldNews/ TA): ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಎರಡು ನಿಫಾ ವೈರಸ್ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಬಂಗಾಳದಿಂದ ಲಕ್ಷಾಂತರ ಕಾರ್ಮಿಕರು ಕೇರಳದಲ್ಲಿ ಉದ್ಯೋಗದಲ್ಲಿರುವುದರಿಂದ ಹಾಗೂ ನಿರಂತರ ಸಂಚಾರ ನಡೆಯುತ್ತಿರುವ ಹಿನ್ನೆಲೆ, ಸೋಂಕು ಹರಡುವ ಸಾಧ್ಯತೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸಲಾಗಿದೆ.

ಪಶ್ಚಿಮ ಬಂಗಾಳದ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರ, ಸಾರ್ವಜನಿಕ ಆರೋಗ್ಯ ಇಲಾಖೆ ಮತ್ತು ಪ್ರಿವೆಂಟಿವ್ ಮೆಡಿಸಿನ್ ಇಲಾಖೆಯ ಮೂಲಕ ಜಂಟಿ ಕಣ್ಗಾವಲು ವ್ಯವಸ್ಥೆ ಆರಂಭಿಸಿದೆ. ತೀವ್ರ ಎನ್ಸೆಫಾಲಿಟಿಸ್ ಸಿಂಡ್ರೋಮ್, ಮೆದುಳಿನ ಸೋಂಕು, ಜ್ವರದೊಂದಿಗೆ ಮಾನಸಿಕ ಅಸ್ವಸ್ಥತೆ ಕಾಣಿಸಿಕೊಳ್ಳುವ ಪ್ರಕರಣಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಪಶ್ಚಿಮ ಬಂಗಾಳದಿಂದ ಆಗಮಿಸುವವರು ಅಥವಾ ಅಲ್ಲಿಗೆ ಪ್ರಯಾಣಿಸಿ ಮರಳಿರುವವರಲ್ಲಿ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ನಿಪಾ ಪರೀಕ್ಷೆ ನಡೆಸಲು ಆದೇಶಿಸಲಾಗಿದೆ.
ಕೇರಳದಲ್ಲಿಯೂ ಎಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಪಶ್ಚಿಮ ಬಂಗಾಳದ ಸಾವಿರಾರು ಕಾರ್ಮಿಕರು ರಾಜ್ಯದ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವುದರಿಂದ, ಗಡಿ ಪ್ರದೇಶಗಳು ಹಾಗೂ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ ಆರೋಗ್ಯ ತಪಾಸಣೆ ಮತ್ತು ಮೇಲ್ವಿಚಾರಣೆ ಹೆಚ್ಚಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದರೆ ತಕ್ಷಣವೇ ವರದಿ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಆರೋಗ್ಯ ತಜ್ಞರ ಪ್ರಕಾರ, ನಿಪಾ ವೈರಸ್ ಬಾವಲಿಗಳ ಮಲ ಮತ್ತು ಜೊಲ್ಲಿನ ಮೂಲಕ ಮನುಷ್ಯರಿಗೆ ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಬಾವಲಿಗಳು ಕಚ್ಚಿರುವ ಹಣ್ಣುಗಳನ್ನು ಸೇವಿಸದಂತೆ, ಮಾರುಕಟ್ಟೆಯಿಂದ ಖರೀದಿಸಿದ ಹಣ್ಣುಗಳನ್ನು ಚೆನ್ನಾಗಿ ತೊಳೆಯುವಂತೆ ಮತ್ತು ರೋಗಲಕ್ಷಣಗಳನ್ನು ಹೊಂದಿರುವವರ ಸಂಪರ್ಕವನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಆತಂಕಪಡದೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದೆ.