ನವದೆಹಲಿ, ಫೆ. 05 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಕಾಮಗಾರಿ ಪ್ರಗತಿ ಬಗ್ಗೆ ಸಂಸದರು ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಈ ಯೋಜನೆಗಳ ಕಾಮಗಾರಿಗಳನ್ನು ಯಾವುದೇ ವಿಳಂಬವಾಗದಂತೆ ಗಮನಹರಿಸುವ ಮೂಲಕ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಈ ವೇಳೆ ಪ್ರಮುಖವಾಗಿ ಶಿರಾಡಿ ಘಾಟ್ ಹಾಗೂ ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (DPR) ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಯೋಜನೆಗಳು ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಇವುಗಳ ಅನುಷ್ಠಾನಕ್ಕೆ ವೇಗ ನೀಡುವಂತೆಯೂ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಅವರು ಮನವರಿಕೆ ಮಾಡಿದ್ದಾರೆ.
ಅಲ್ಲದೆ, ಮಾಣಿ -ಸಂಪಾಜೆ ನಡುವಿನ ರಸ್ತೆಯು ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವ್ಯಾಪ್ತಿಗೆ ಬಂದಿರುವುದರಿಂದ, ಅದರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಹೆಚ್ಚಿನ ಗಮನಹರಿಸುವ ಮೂಲಕ ಮರುಪರಿಶೀಲಿಸುವ ಅಗತ್ಯತೆಯನ್ನು ಸಭೆಯಲ್ಲಿ ಸಂಸದರು ಒತ್ತಿ ಹೇಳಿದರು. ಈ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉಪಸ್ಥಿತರಿದ್ದರು.