ನವದೆಹಲಿ, ಮಾ. 02 (DaijiworldNews/TA): ಮಧ್ಯಪ್ರಾಚ್ಯದಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ದೂರವಾಣಿ ಕರೆ ಮಾಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ಯುದ್ಧವನ್ನು ತಕ್ಷಣ ನಿಲ್ಲಿಸುವ ಅಗತ್ಯವಿದೆ ಎಂಬುದನ್ನು ಭಾರತ ಪುನರುಚ್ಚರಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಗಂಭೀರ ಕಳವಳವನ್ನು ನೆತನ್ಯಾಹು ಅವರಿಗೆ ತಿಳಿಸಿದ್ದಾರೆ. “ನಾಗರಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಪರಿಸ್ಥಿತಿಯನ್ನು ಶಮನಗೊಳಿಸಿ, ಯುದ್ಧವನ್ನು ಬೇಗನೆ ನಿಲ್ಲಿಸುವುದು ಅತ್ಯಗತ್ಯ,” ಎಂದು ಅವರು ಒತ್ತಿ ಹೇಳಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕದ ದಾಳಿಗಳಿಗೆ ಪ್ರತಿಯಾಗಿ ಇರಾನ್ ಕ್ಷಿಪಣಿ ದಾಳಿಗಳನ್ನು ಮುಂದುವರಿಸಿರುವ ಹಿನ್ನೆಲೆ ಪ್ರಾದೇಶಿಕ ಭದ್ರತೆ ಕುರಿತಾಗಿ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಇಸ್ರೇಲ್ನ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ರಾಜಧಾನಿ ಜೆರುಸಲೇಂ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ಮುಂದುವರಿಯುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಮತ್ತೊಂದೆಡೆ, ಯುನೈಟೆಡ್ ಅರಬ್ ಎಮಿರೇಟ್ಸ್ ರಾಷ್ಟ್ರಗಳ ಮೇಲೂ ಇರಾನ್ ಸೇನೆಯಿಂದ ದಾಳಿ ನಡೆದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಟೆಹ್ರಾನ್ನಲ್ಲಿ ಇರುವ ತನ್ನ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಯುಎಇ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಅಲ್ಲಿನ ರಾಯಭಾರಿ ಅಧಿಕಾರಿಗಳು ಮತ್ತು ರಾಜತಾಂತ್ರಿಕ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುತ್ತದೆ ಎಂದು ‘ಎಕ್ಸ್’ ಮೂಲಕ ತಿಳಿಸಲಾಗಿದೆ.
ಭದ್ರತಾ ಕಾರಣಗಳಿಂದಾಗಿ ದುಬೈ ಹಾಗೂ ಅಬುಧಾಬಿ ಷೇರು ಮಾರುಕಟ್ಟೆಗಳನ್ನು ಎರಡು ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಜಾಗತಿಕ ಮಟ್ಟದಲ್ಲೂ ಆತಂಕದ ವಾತಾವರಣ ಸೃಷ್ಟಿಸಿದೆ.