ಬೆಂಗಳೂರು, 06 (DaijiworldNews/AK): ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ.
ಮರುನಾಮಕರಣದ ಜೊತಗೆ ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಕಾರವಾರ ಮತ್ತು ಯಾದಗಿರಿಯಲ್ಲಿ ಎರಡು ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಇವು ಸ್ಥಳೀಯ ಜನರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲಿವೆ. ಹೊಸದುರ್ಗ-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ ೯೨ ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ೨೩೬ ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ