ನವದೆಹಲಿ, ಮಾ. 09 (DaijiworldNews/AA): ಕರೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ಗೆ ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.10ರಂದು ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ವಿಜಯ್ ಅವರಿಂದ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿರುವ ಹೆಚ್ಚುವರಿ ಪುರಾವೆಗಳು ಮತ್ತು ಸಾಮಗ್ರಿಗಳನ್ನು ಸಂಗ್ರಹಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೊದಲು ಪ್ರಕರಣದ ವಿಚಾರಣೆಯನ್ನು ಎಸ್ಐಟಿ ವಹಸಿಕೊಂಡಿತ್ತು. ಅದಾದ ಬಳಿಕ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಸಿಬಿಐ ಪ್ರಕರಣದ ವಿಚಾರಣೆ ವಹಿಸಿಕೊಂಡಿದೆ. ಕಳೆದ ಜ. 12 ಮತ್ತು ಜ. 19ರಂದು ಸಿಬಿಐ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ತನಿಖೆ ಭಾಗವಾಗಿ ವಿಚಾರಣೆಗೆ ಹಾಜರಾಗಿದ್ದರು. ಸಿಬಿಐ ಅಧಿಕಾರಿಗಳು ಈಗಾಗಲೇ ಕೆಲವು ಜನರನ್ನು ವಿಚಾರಣೆ ನಡೆಸಿ, ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ 27ರಂದು ವಿಜಯ್ ಅವರು ಕರೂರಿನಲ್ಲಿ ಪಕ್ಷದ ಸಮಾವೇಶ ಆಯೋಜನೆ ಮಾಡಿದ್ದರು. ಈ ವೇಳೆ ಸಮಾವೇಶಕ್ಕೆ ದೊಡ್ಡಮಟ್ಟದಲ್ಲಿ ಜನರು ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.