ಬೆಂಗಳೂರು, ಮಾ. 17 (DaijiworldNews/AA): ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ನಾಳೆಯಿಂದ ರಾಜ್ಯದಾದ್ಯಂತ ಆರಂಭವಾಗಲಿದೆ.

ಶಿಕ್ಷಣ ಇಲಾಖೆಯು ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಏಪ್ರಿಲ್ 2ರವರೆಗೆ ಪರೀಕ್ಷಾ ಪ್ರಕ್ರಿಯೆ ನಡೆಯಲಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.