ಶಿವಮೊಗ್ಗ, ಮಾ. 30 (DaijiworldNews/TA) : ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಅಪಘಾತದಲ್ಲಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಭದ್ರಾವತಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.